ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿ.ಎಸ್. ಪಾಟೀಲ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಒಂದು ತಿಂಗಳಿಂದ ಮುಂಡಗೋಡದ ರಾಜಕೀಯದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಶಾಸಕ ವಿ.ಎಸ್. ಪಾಟೀಲ್ ಅವರ ಪಕ್ಷಾಂತರ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಪಕ್ಷವು ಇಂದು ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದೆ.
ಕಳೆದ ಎರಡ್ಮೂರು ತಿಂಗಳ ಹಿಂದೆಯೇ ವಿ.ಎಸ್. ಪಾಟೀಲ್ ರವರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದ್ದ ವಿ.ಎಸ್. ಪಾಟೀಲರು ಕಳೆದೊಂದು ತಿಂಗಳಿಂದ ನೇರವಾಗಿಯೇ ನನಗೆ ಮತ್ತು ಮೂಲ ಬಿಜೆಪಿಗರಿಗೆ ಬಿಜೆಪಿ ಪಕ್ಷದಲ್ಲಿ ಕಡೆಗಣನೆ ಆಗುತ್ತಿದೆ, ಪಕ್ಷದಲ್ಲಿ ಬೆಲೆ ಸಿಗುತ್ತಿಲ್ಲ ಎಂದು ನೇರವಾಗಿ ಆರೋಪ ಮಾಡುತ್ತಾ ನಾನು ಕಾಂಗ್ರೆಸ್ ಪಕ್ಷ ಸೇರುವುದು ಖಚಿತ ಎಂದು ಹೇಳಿಕೆಯನ್ನು ಸಹ ಕೊಟ್ಟಿದ್ದರು ಮತ್ತು ನಾನೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಸರ್ಕಾರ ಇಂದು ಅವರನ್ನು ಅಧ್ಯಕ್ಷ ಸ್ಥಾನದಿಂದ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಇದು ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯ ಮೇಲೆ ಯಾವ ರೀತಿಯ ಪರಿಣಾಮವನ್ನು ಬೀರಬಹುದು ಎಂದು ಕಾಯ್ದು ನೋಡಬೇಕಾಗಿದೆ.
ವರದಿ: ಮಂಜುನಾಥ ಹರಿಜನ