
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಅಮಾನತುಗೊಂಡ ಅಧಿಕಾರಿಗಳಲ್ಲಿ ಸಹಾಯಕ ಕೃಷಿ ನಿರ್ದೇಶಕಿ ನಾಗರತ್ನ ಹುಲಿಕೋಟಿ ಮತ್ತು ಕೃಷಿ ಅಧಿಕಾರಿ ಸಿದ್ದಪ್ಪ ಬಾಚಿಹಾಳ ಅವರಿದ್ದಾರೆ. ಈ ಇಬ್ಬರು ಅಧಿಕಾರಿಗಳು 2024-25ನೇ ಸಾಲಿನ ನರೇಗಾ ಯೋಜನೆಯಡಿ ಜಮೀನುಗಳಿಗೆ ಬದು ನಿರ್ಮಾಣ ಮಾಡದೆ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸುಮಾರು ಎರಡು ಕೋಟಿ ರೂಪಾಯಿಯ ಅವ್ಯವಹಾರ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.
ಈ ಹಗರಣದ ಬಗ್ಗೆ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಚರ್ಚೆ ನಡೆದಿದ್ದು, ನಂತರದ ತನಿಖೆಯಲ್ಲಿ ಈ ಅಧಿಕಾರಿಗಳ ನೇರ ಭಾಗವಹಿಸುವಿಕೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ವರದಿ ಆಧಾರದ ಮೇಲೆ ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಎಂ. ಇಂದ್ರ ಅವರು ಇಬ್ಬರ ಅಮಾನತು ಆದೇಶ ಹೊರಡಿಸಿದ್ದಾರೆ.
ಈ ಅವ್ಯವಹಾರದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿರುವುದರಿಂದ ಇನ್ನಷ್ಟು ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ.