
ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಶಿಲ್ಪಾ ಯರಮಸನಾಳ (ವಯಸ್ಸು 20) ಎಂದು ಗುರುತಿಸಲಾಗಿದೆ. ಶಿಲ್ಪಾ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಮೂಲವಾಸಿಯಾಗಿದ್ದು, ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದರು.
ವಿದ್ಯಾರ್ಥಿನಿ ಹಾಸ್ಟೆಲಿನ ಐದನೇ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದು, ಈ ಕೃತ್ಯಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.