
ಮಂಗಳೂರಿನ ಲಾಲ್‌ಬಾಗ್ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಒಬ್ಬ ವ್ಯಕ್ತಿಯನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತನಿಂದ 11 ಗ್ರಾಂ ಎಂಡಿಎಂಎ ಜೊತೆಗೆ ಮೊಬೈಲ್ ಫೋನ್ ಹಾಗೂ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಅಲಂತಡ್ಕ ಹೌಸ್‌ನ ನಿವಾಸಿ ಮೊಹಮ್ಮದ್ ಅಶ್ರಫ್ ಅಲಂತಡ್ಕ (ವಯಸ್ಸು 50) ಎಂದು ಗುರುತಿಸಲಾಗಿದೆ. ನವದೆಹಲಿಯಿಂದ ಕೊರಿಯರ್ ಮೂಲಕ ಎಂಡಿಎಂಎ ಮಾದಕ ವಸ್ತು ತರಿಸಿಕೊಂಡು, ಮಂಗಳೂರು ನಗರಕ್ಕೆ ತಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಲಾಲ್‌ಬಾಗ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಅಶ್ರಫ್‌ಅನ್ನು ಬಂಧಿಸಿದ್ದಾರೆ. ಈ ವೇಳೆ ಅಂದಾಜು ರೂ. 1 ಲಕ್ಷ ಮೌಲ್ಯದ 11 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್ ಹಾಗೂ ಸ್ಕೂಟರ್ ಸೇರಿದಂತೆ ಒಟ್ಟು ರೂ. 1.60 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರ ಮಾರ್ಗದರ್ಶನದಲ್ಲಿ ಪೊಲೀಸರು ರಫೀಕ್ ಕೆ.ಎಂ. ಅವರ ನೇತೃತ್ವದಲ್ಲಿ ಪಿಎಸ್‌ಐ ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ಎಎಸ್‌ಐ ಮೋಹನ್ ಕೆ.ವಿ., ರಾಮ ಮತ್ತು ಸಿಸಿಬಿ ಸಿಬ್ಬಂದಿ ಭಾಗವಹಿಸಿದ್ದರು.